ಚಿತ್ರದುರ್ಗ : ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಹೆರಿಗೆ ತಜ್ಞರಿಗೂ ಸೋಂಕು ತಗುಲಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದ್ದು, ಆಸ್ಪತ್ರೆಗೆ ತೆರಳಲು ರೋಗಿಗಳು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯ ಬಡ ಜನರ ಸಂಜೀವಿನಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಸ್ಪತ್ರೆಗೆ ಕಂಠಕ ಎದುರಾದಂತಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಆದ್ದರಿಂದ ಆ ಸೋಂಕಿತ ವೈದ್ಯನ ಬಳಿ ಹೆರಿಗೆ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆದು ಪ್ರಾಥಮಿಕ ಸಂಪರ್ಕದಲ್ಲಿರುವವರು ಯಾರೊಬ್ಬರು ಸಂಪರ್ಕಕ್ಕೆ ಸಿಗದೆ ಇರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.
ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿ ಡಾ.ಪಾಲಾಕ್ಷ ಅವರನ್ನು ಕೇಳಿದ್ರೆ, ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ. ಹೀಗಾಗಿ ಸೋಂಕಿತರ ಸಂಪರ್ಕದಲ್ಲಿದ್ದವರನ್ನೆಲ್ಲ ಕ್ವಾರಂಟೈನ್ ಮಾಡಲಾಗುತ್ತಿದೆ. ಅಲ್ಲದೇ ಈ ವೈದ್ಯರ ಬಳಿ ಚಿಕಿತ್ಸೆ ಪಡೆದ ರೋಗಿಗಳನ್ನು ಸಹ ಪತ್ತೆ ಹಚ್ಚಲಾಗುತ್ತಿದೆ. ಅವರ ಮಾಹಿತಿ ಸಿಕ್ಕ ತಕ್ಷಣ ಕ್ವಾರಂಟೈನ್ ಮಾಡಲಾಗುವುದು. ಹೀಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ಕೋಟೆನಾಡಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ, ಸಾರ್ವಜನಿಕರ ಹಿತ ಕಾಯುವ ವೈದ್ಯರು ಹಾಗೂ ಪೊಲೀಸರಲ್ಲೇ ಹೆಚ್ಚು ಸೋಂಕು ಕಂಡು ಬರುತ್ತಿರುವುದ್ದರಿಂದ ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.