ಚಿತ್ರದುರ್ಗ: ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲು ಕಗ್ಗಂಟಾಗಿರುವ ಅಜ್ಜಂಪುರ ರೈಲ್ವೆ ಅಂಡರ್ ಪಾಸ್ ಕುರಿತು ಸಂಸದ ಎ.ನಾರಾಯಣಸ್ವಾಮಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ರೈಲ್ವೆ ಸೇತುವೆ ಕಾಮಗಾರಿಯನ್ನು ಸಂಬಂಧಪಟ್ಟ ಭದ್ರಾ ಮೇಲ್ದಂಡೆ ಅಧಿಕಾರಿಗಳು ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಕಾಮಗಾರಿಯ ಗುತ್ತಿಗೆದಾರರು ರೈಲ್ವೆ ಸಂಚಾರ ನಿಲುಗಡೆ ಆಗದೆ ರೈಲ್ವೆ ಸೇತುವೆ ಕಾಮಗಾರಿ ಮುಗಿಸುವುದು ಕಷ್ಟ ಎಂದು ತಿಳಿಸಿದರು.

ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿದ ನಾರಾಯಣಸ್ವಾಮಿ, ರೈಲ್ವೆ ಸೇತುವೆ ಕಾಮಗಾರಿ ಮುಗಿಯದೇ ವಾಣಿವಿಲಾಸ ಸಾಗರಕ್ಕೆ ನೀರು ತೆಗೆದುಕೊಂಡು ಹೋಗುವುದು ಅಸಾಧ್ಯ ಎಂದು ಅರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನ ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಸಮಸ್ಯೆ ಆಲಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಆದೇಶಿಸಿದ್ದಾರೆ.
