ಚಿತ್ರದುರ್ಗ: ಕೊರೊನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಕೊಂಡೊಯ್ಯಲಾಗದೆ ಬೆಳೆಗಳನ್ನು ನಾಶಪಡಿಸಿ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.
ಕೆಲ ರೈತರು ಬೆಳೆದ ಬೆಳಯನ್ನು ಮಾರುಕಟ್ಟೆಗೆ ಸಾಗಿಸಿದರೂ ನಿಗದಿತ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ಇದರಿಂದ ಕೊರೊನಾ ವೈರಸ್ ತೊಲಗಿಸಿ ರೈತರನ್ನು ಉಳಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಹಾಗೂ ರೈತರು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ನುಲೇನೂರು ಶಂಕ್ರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಿದರು. 'ಕೊರೊನಾ ತೊಲಗಿಸಿ ರೈತರನ್ನು ಉಳಿಸಿ' ಎಂದು ಘೋಷಣೆಗಳನ್ನು ಕೂಗುವ ಮೂಲಕ ಜಿಲ್ಲಾಧಿಕಾರಿ ವಿನೋತ್ ಪ್ರಿಯಾರವರಿಗೆ ಮನವಿ ಮಾಡಿದರು. ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ರೈತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.