ಹೊಸದುರ್ಗ: ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಕೆಂಡಾಮಂಡಲರಾಗಿರುವ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಸಿಎಂ ಯಡಿಯೂರಪ್ಪನವರ ಪುತ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ವಿರುದ್ಧ ಗುಟುರು ಹಾಕಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ನನಗೆ ತಿಳಿಯದೇ ಸಾಕಷ್ಟು ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಗೂಳಿಹಟ್ಟಿ ಶೇಖರ್ ಹೊಸದುರ್ಗದಲ್ಲಿ ನಡೆದ ಕಾರ್ಯಕರ್ತರ ಸಭೆಯೊಂದರಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹೊಸದುರ್ಗ ಪಿಎಸ್ಐವೋರ್ವರನ್ನು ತನ್ನ ಗಮನಕ್ಕೂ ತಾರದೇ ವರ್ಗಾವಣೆ ಮಾಡಿರುವ ಮಾಹಿತಿ ತಿಳಿದು, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ವಿರುದ್ಧ ಗೂಳಿಹಟ್ಟಿ ಗರಂ ಆಗಿದ್ದಾರೆ.
ಇನ್ನು, ಸಚಿವ ಸ್ಥಾನ ನೀಡದಿದ್ದಕ್ಕೆ ಬೇಸರವಾಗಿರುವ ಶಾಸಕ ಗೂಳಿಹಟ್ಟಿ ಶೇಖರ್, ಇತ್ತೀಚಿಗೆ ತಮ್ಮ ಅಸಮಾಧಾನ ಹೊರಹಾಕಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು. ಇದೀಗ ಸಿಎಂ ಯಡಿಯೂರಪ್ಪ ಪುತ್ರನ ವಿರುದ್ಧ ತಿರುಗಿ ಬಿದ್ದಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.