ಚಿತ್ರದುರ್ಗ: ಜಿಲ್ಲಾಡಳಿತದಿಂದ ಕೊರೊನಾ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಜನರು ಯಾರೇ ನಿಮ್ಮ ಬಳಿ ಚಿಕಿತ್ಸೆಗೆ ಬಂದಾಗ ಕೊರೊನಾ ಸೊಂಕು ಪತ್ತೆಯಾದಲ್ಲಿ ತಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೊರೊನಾ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೊರೊನಾ ಪತ್ತೆಯಾದಲ್ಲಿ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಜಿಲ್ಲೆಯಲ್ಲಿ ಕೊರೊನಾ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ರೋಗದಿಂದ ಹೊರ ಬರಲು ಮುಂಜಾಗ್ರತಾ ಕ್ರಮ ಅಗತ್ಯ. ಈ ಕುರಿತು ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತೆಗಳು, ನಗರಸಭೆ, ತಹಶೀಲ್ದಾರ್ ಕಚೇರಿ, ತಾಲೂಕು ಪಂಚಾಯತ್ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು. ಯಾವುದೇ ಪ್ರಕರಣ ದಾಖಲಾದಲ್ಲಿ, ವಿದೇಶದಿಂದ ಯಾರಾದರೂ ಆಗಮಿಸಿದ್ದಲ್ಲಿ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು.