ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲಿಸಿ ಸಮರ್ಪಕವಾಗಿರಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯಿತಿ ಮಾಸಿಕ ಕೆಡಿಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳು) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಬೇಸಿಗೆ ಕಾಲ ಆರಂಭವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲಿಸಿಬೇಕು. ಸಂಪೂರ್ಣ ಕೆಟ್ಟು ಹೋಗಿರುವ ಹಾಗೂ ದುರಸ್ತಿ ಅಗತ್ಯವಿರುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ರೂಪಿಸಿ ಅನುಮೋದನೆ ಪಡೆದು ದುರಸ್ತಿ ಮಾಡಿಸಬೇಕು. ಬೇಸಿಗೆಯ ಅವಧಿಯಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ಯಾವುದೇ ಜನಪ್ರತಿನಿಧಿಗಳು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ನೀಡಿದಲ್ಲಿ, ಕೂಡಲೆ ಅದಕ್ಕೆ ಸ್ಪಂದಿಸಬೇಕು ಎಂದರು.