ತುಮಕೂರು/ಚಿತ್ರದುರ್ಗ: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ನೆರೆಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಾಟೀಲ್ ಒತ್ತಾಯಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಉಂಟಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸರ್ಕಾರ ಸರಿಯಾದ ರೀತಿಯಲ್ಲಿ ಸ್ಪಂದಿಸುವ ಮೂಲಕ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ 4,000 ಹಳ್ಳಿಗಳು ಮುಳುಗಡೆಯಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ರವಾಹಕ್ಕೆ ತುತ್ತಾಗಿರುವವರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಹಾಗಾಗಿ ಶೀಘ್ರವಾಗಿ ಪ್ರಕೃತಿ ವಿಕೋಪಕ್ಕೆ ಒಳಗಾದ ಪ್ರದೇಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಸುಮಾರು 25,000 ಕೋಟಿ ಹಣವನ್ನು ಪರಿಹಾರವನ್ನಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕದ ನೆರೆಗೆ ತುತ್ತಾಗಿದ್ದ ಸಂತ್ರಸ್ತರಿಗೆ ತಕ್ಷಣ ಪರಿಹಾರ ಹಾಗೂ ಪುರ್ನವಸತಿ ಕಲ್ಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಚಿತ್ರದುರ್ಗದಲ್ಲೂ ಪ್ರತಿಭಟನೆ ನಡೆಸಲಾಯಿತು. ಕೊಯ್ನಾ ಅಣೆಕಟ್ಟಿನ ಮೂಲಕ ಬೇಜವಾಬ್ದಾರಿಯಿಂದ ಏಕಾಏಕಿಯಾಗಿ ಹರಿಸಿದ್ದ 6 ಲಕ್ಷ ಕ್ಯೂಸೆಕ್ಸ್ ನೀರು ರೈತರ ಬದುಕು ಕಸಿದುಕೊಂಡಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾರವರಿಗೆ ಮನವಿ ಸಲ್ಲಿಸಲಾಯಿತು. ಅಷ್ಟೇ ಅಲ್ಲದೆ, ನೆರೆಯಿಂದಾಗಿ 14,82,000 ಎಕರೆ ಕೃಷಿ ಬೆಳೆ ನೀರು ಪಾಲಾಗಿದ್ದು, ತಕ್ಷಣ ಬೆಳೆ ಪರಿಹಾರವನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.