ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನಗರಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಹಿರಿಯೂರು ತಾಲ್ಲೂಕಿನಲ್ಲಿ 19 ಗ್ರಾಮಗಳ ಪೈಕಿ 639.23 ಎಕರೆ ಭೂ-ಸ್ವಾಧೀನಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಭೂ-ಸ್ವಾಧೀನ ಕಾಯ್ದೆ 2013 ರನ್ವಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ನೂತನ ರೈಲ್ವೆ ಮಾರ್ಗವು 201.47 ಕಿ.ಮೀ ಇರಲಿದ್ದು, ಈ ನೇರ ಮಾರ್ಗದಿಂದ ತುಮಕೂರು-ದಾವಣಗೆರೆ ನಡುವಿನ ದೂರವನ್ನು 53.71 ಕಿ.ಮೀ. ಕಡಿಮೆಗೊಳಿಸಲಿದೆ ಎಂದರು. ಹಿರಿಯೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉದ್ದೇಶಿತ ನೂತನ ರೈಲ್ವೆ ಮಾರ್ಗದಲ್ಲಿ ಹಿರಿಯೂರು ತಾಲ್ಲೂಕಿನ ಐಮಂಗಲ, ಕಸಬಾ ಮತ್ತು ಜವಗೊಂಡನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ 19 ಗ್ರಾಮಗಳ ಪೈಕಿ 639.23 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ಬಾಧಿತರಾಗುವ ಸಂತ್ರಸ್ಥರಿಗೆ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಸೌಲಭ್ಯ ಕಲ್ಪಿಸಲು ಹಾಗೂ ಪರಾಮರ್ಶಿಸಲು ಹೊಸ ಭೂಸ್ವಾಧೀನ ಕಾಯ್ದೆ 2013 ರಂತೆ ಜಿಲ್ಲಾ ಮಟ್ಟದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಯೋಜನಾ ಸಮಿತಿಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ ಎಂದರು.