ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟ ವಿಚಾರವಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಮೀಸಲು ಪ್ರಕಟ ವೇಳೆ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರ ಸಲಹೆ ಕೇಳಿದ್ದರು. ಆದ್ರೆ ನನ್ನ ಕ್ಷೇತ್ರದಲ್ಲಿ ನನಗೆ ಗೊತ್ತಿಲ್ಲದೆ ಮೀಸಲಾತಿ ಬದಲಾವಣೆ ಆಗಿದ್ದು, ನನ್ನ ಕ್ಷೇತ್ರದಲ್ಲಿ ನನಗೆ ಅವಮಾನ ಆಗುತ್ತಿದೆ ಎಂದಿದ್ದಾರೆ.

ಹೊಸದುರ್ಗದ ಸ್ಥಳೀಯ ಸಂಸ್ಥೆಯ ಮೀಸಲಾತಿಯನ್ನು ಸರಿ ಮಾಡಿಸಿ. ಇದು ನನ್ನ ಮರ್ಯಾದೆ ಪ್ರಶ್ನೆ, ಇಲ್ಲದಿದ್ರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಬಹಿರಂಗವಾಗಿ ತಮ್ಮ ವಾಟ್ಸ್ಯಾಪ್ ಸಂದೇಶವನ್ನು ಸಿಎಂ ಯಡಿಯೂರಪ್ಪ ಅವರಿಗೆ ಗೂಳಿಹಟ್ಟಿ ಶೇಖರ್ ರವಾನಿಸಿದ್ದಾರೆ.