ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ಒಂದೂ ಕೋವಿಡ್-19 ಪ್ರಕರಣ ವರದಿಯಾಗಿಲ್ಲ. ಇನ್ನು 78 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಒಟ್ಟು 7 ಪಾಸಿಟಿವ್ ಪ್ರಕರಣಗಳ ಪೈಕಿ ಒಬ್ಬರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆರು ಜನರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಒಟ್ಟು 37 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಇದುವರೆಗೂ 1,284 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 1,157 ಜನರ ವರದಿ ನೆಗೆಟಿವ್ ಎಂದು ಬಂದಿದೆ. 78 ಜನರ ಪರೀಕ್ಷಾ ವರದಿ ಬರುವುದು ಬಾಕಿ ಇದ್ದು, ಈವರೆಗೆ ಜಿಲ್ಲೆಯಲ್ಲಿ 310 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಸದ್ಯ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರು ಹಾಗೂ ಶಂಕಿತರ ಸಂಪರ್ಕ ಹಿನ್ನೆಲೆ ಹೊಂದಿರುವ 256 ಜನರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. 59 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.
ಮೇ. 11ರಂದು ಫೀವರ್ ಕ್ಲಿನಿಕ್‍ಗಳಲ್ಲಿ 273 ಜನರ ಜ್ವರ ತಪಾಸಣೆ ಮಾಡಿದ್ದು, ಇದುವರೆಗೂ ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‍ನಲ್ಲಿ ಒಟ್ಟು 12,948 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ ಎಂದಿದ್ದಾರೆ.