ಚಿತ್ರದುರ್ಗ: ಬೆಳಗಾವಿ ಜಿಲ್ಲೆಯ ಪೀರವಾಡಿ ಗಲ್ಲಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ಬೆಳಗಾವಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿರೋಧ ವ್ಯಕ್ತ ಪಡಿಸುತ್ತಿರುವುದನ್ನು ಖಂಡಿಸಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಾಕಷ್ಟು ಜನ ಭಾಗಿಯಾಗಿ ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಇನ್ನು ಬೆಳಗಾವಿ ನಗರದಲ್ಲಿ ಸಂಭಾಜೀ, ಶಿವಾಜಿ, ತಾನಾಜಿ ರವರ ಪ್ರತಿಮೆ ಪ್ರತಿಷ್ಠಾಪಿಸುವ ವೇಳೆ ತುಟಿ ಬಿಚ್ಚದ ಜಿಲ್ಲಾಡಳಿತ ಅದೇ ಊರಿನಲ್ಲಿ ಜನಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಜಿಲ್ಲಾಡಳಿತದ ನಡೆಗೆ ರಾಜ್ಯದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ.
ಇದರಿಂದ ಸಮಸ್ಯೆಯನ್ನು ಬಗೆಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.