ಚಿತ್ರದುರ್ಗ: ಬೆಳಗಾವಿಯ ಪೀರವಾಡಿ ಗಲ್ಲಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ಡಿಸಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪುತ್ಥಳಿಗೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದ ಬೆಳಗಾವಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಯನ್ನು ಬಗೆಹರಿಸುವಂತೆ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಳಗಾವಿ ನಗರದಲ್ಲಿ ಸಂಭಾಜಿ, ಶಿವಾಜಿ, ತಾನಾಜಿ ಅವರ ಪ್ರತಿಮೆ ಪ್ರತಿಷ್ಠಾಪಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತ ತುಟಿ ಬಿಚ್ಚಿರಲಿಲ್ಲ. ಅದೇ ಊರಿನಲ್ಲಿ ಜನಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡ್ಡಿಪಡಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು.