ಚಿತ್ರದುರ್ಗ: ಜನರಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ರಾಜ್ಯಾದ್ಯಂತ ಸಾವಿರಾರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರ್ಕಾರ ಸ್ಥಾಪನೆ ಮಾಡಿದೆ. ಆದರೆ, ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಹಲವು ಶುದ್ಧ ಕುಡಿವ ನೀರಿನ ಘಟಕಗಳು ದುರಸ್ತಿಗೆ ಬಂದಿದ್ದು, ಜನರು ಕುಡಿಯುವ ನೀರಿಗಾಗಿ ಪರಿತಪ್ಪಿಸುತ್ತಿದ್ದಾರೆ.
ಹೌದು, ಜನರಿಗೆ ಶುದ್ದ ಕುಡಿವ ನೀರು ಒದಗಿಸಲು ಜಿಲ್ಲಾದ್ಯಂತ 1053 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಪಂಚಾಯತ್ ಇ ಟೆಂಡರ್ ಗಳ ಮೂಲಕ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಿದೆ. ಇತ್ತ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿವೆ. ಶುದ್ಧ ಕುಡಿವ ನೀರಿನ ಘಟಕಗಳ ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.
2016ನೇ ಸಾಲಿನಲ್ಲಿ ಜಿಲ್ಲಾದ್ಯಂತ ತಲಾ ಒಂದು ಘಟಕಕ್ಕೆ 8 ಲಕ್ಷ ರೂಪಾಯಿ ವೆಚ್ಚದಲ್ಲಿ, ಅಂದಾಜು 1053 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಘಟಕಗಳ ಸ್ಥಾಪನೆಗೆ ಒಟ್ಟು 9 ಏಜೆನ್ಸಿಗಳಿಗೆ ಗುತ್ತಿಗೆ ನೀಡಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಜಿಲ್ಲೆಯ ಜನತೆ ಹೇಳುವ ಪ್ರಕಾರ ಬಹುತೇಕವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ, ಆದರೆ, ಅವುಗಳನ್ನು ಸರಿಪಡಿಸುವ ಕೆಲಸ ಮಾತ್ರ ಆಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಓದಿ : ಗಡಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮ, ಉದ್ಧವ್ ಹೇಳಿಕೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧ.. ಸಿಎಂ ಬಿಎಸ್ವೈ
ಜಿಲ್ಲೆಯಲ್ಲಿ 73 ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ. ಸರಿಪಡಿಸುವ ಬಗ್ಗೆ ಈಗಾಗಲೇ ಮೇಲಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ. ಬರುವ ದಿನಗಳಲ್ಲಿ ಸರಿಪಡಿಸಲಾಗುವುದು. ಹೊಸದಾಗಿ ಘಟಕಗಳ ನಿರ್ಮಾಣ ಮಾಡಲು ಸದ್ಯ 12 ಲಕ್ಷ ರುಪಾಯಿ ಖರ್ಚು ಮಾಡಬೇಕಾಗುತ್ತದೆ. ಆದ್ದರಿಂದ ಇರುವ ಶುದ್ಧ ನೀರಿನ ಘಟಕಗಳನ್ನು ಸರಿಪಡಿಸಿ, ಜನರಿಗೆ ಕುಡಿಯುವ ನೀರಿನ ಅನುಕೂಲತೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಞಾನೇಶ್ ಹೇಳಿದ್ದಾರೆ.