ಚಿತ್ರದುರ್ಗ: ಒಂದೇ ಸ್ಥಳದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಟಿ. ನುಲೇನೂರು ಬಳಿ ನಡೆದಿದೆ.
ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಲಕ್ಷ್ಮೀಸಾಗರ ಗ್ರಾಮದ ಕುಮಾರ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಘಟನಾ ಸ್ಥಳಕ್ಕೆ ಜನರು ಮುಗಿಬಿದ್ದಿದ್ದಾರೆ ಎನ್ನಲಾಗುತ್ತಿದೆ.
ಇದೇ ವೇಳೆ ಅಪಘಾತ ನೋಡಲು ಘಟನಾ ಸ್ಥಳದಲ್ಲಿ ಹೊಳಲ್ಕೆರೆ ತಾಲೂಕಿನ ಬಿಜೆ ಹಳ್ಳಿ ಗ್ರಾಮದ ವ್ಯಕ್ತಿಯೋರ್ವ ನಿಂತಿದಿದ್ದನು. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಆತ ಸಾವನ್ನಪ್ಪಿದ್ದಾನೆ. ನಾಗರಾಜು (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಟಿ. ನುಲೇನೂರು ಬಳಿ ಅಪಘಾತ ಸಂಖ್ಯೆಗಳು ಹೆಚ್ಚಾಗುತ್ತಿದ್ದು, ಅಪಘಾತಗಳ ಸಂಖ್ಯೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.