ಚಿತ್ರದುರ್ಗ: ಸಿಎಂ ಯಡಿಯೂರಪ್ಪ ಅವರು ಯಾದವ ಸಮುದಾಯಕ್ಕೆ ಕೊಟ್ಟ ಮಾತಿನಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ಗೆ ಸಚಿವ ಸ್ಥಾನ ನೀಡುವಂತೆ ಸಮುದಾಯದ ಮುಖಂಡ ಉಗ್ರಮೂರ್ತಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಹಿರಿಯೂರು ಪಟ್ಟಣದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತಾನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಯಾದವ ಸಮುದಾಯಕ್ಕೆ ರಾಜಕೀಯವಾಗಿ ಸರಿಯಾದ ಸ್ಥಾನಮಾನಗಳು ದೊರೆಯುತ್ತಿಲ್ಲ. ಇತ್ತ ಮುಖ್ಯಮಂತ್ರಿ ಯಡಿಯೂರಪ್ಪನವರು ಯಾದವ (ಗೊಲ್ಲ) ಸಮುದಾಯದ ಶಾಸಕಿ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ನಿನ್ನೆ ಸಚಿವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯಕ್ಕೆ ಕೊಟ್ಟ ಭರವಸೆ ಹುಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಮೂರು ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿದ್ದು, ಯಾದವ ಸಮುದಾಯವನ್ನು ಕಡೆಗಣಿಸುತ್ತಿದೆ ಎಂದು ಸಮುದಾಯದ ಮುಖಂಡರು ಸರ್ಕಾರ ವಿರುದ್ಧ ಸಿಡಿಮಿಡಿಗೊಂಡರು. ಜೊತೆಗೆ ಕೂಡಲೇ ಯಾದವ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡುವಂತೆ ಗೊಲ್ಲ ಸಮುದಾಯದ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಿದರು.