ಬಂಟ್ವಾಳ (ದಕ್ಷಿಣಕನ್ನಡ): ಗ್ರಾನೈಟ್ ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳಗ್ಗೆ ಲಾರಿಯಲ್ಲಿದ್ದ ಗ್ರಾನೈಟ್ನ್ನು ಅನ್ಲೋಡ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಇಲ್ಲಿಯೇ ಇದ್ದ ನೀರಿನ ತೊಟ್ಟಿ ಮೇಲೆ ಉರುಳಿದೆ. ಈ ವೇಳೆ ಲಾರಿಯಲ್ಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿವೆ. ಸ್ಥಳಕ್ಕೆ ವಿಟ್ಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬ್ರೇಕ್ ಫೇಲ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ : ಬ್ರೇಕ್ ಫೇಲಾಗಿ ಬಿಎಂಟಿಸಿ ಬಸ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆ. ಆರ್. ಮಾರ್ಕೆಟ್ ನಿಂದ ಚಾಮರಾಜಪೇಟೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಮಾರ್ಕೆಟ್ ಫ್ಲೈ ಓವರ್ ಮೇಲೆ ಸಾಗುವಾಗ ಬೆಳಗ್ಗೆ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕನನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ. ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ಗಾಯಗಳಾಗಿಲ್ಲ. ಬಸ್ನಲ್ಲಿ ಯಾರೂ ಪ್ರಯಾಣಿಕರು ಇಲ್ಲದ್ದರಿಂದ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ.
ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಸಂಭವಿಸಿರೋದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಮತ್ತು ಲಾರಿ ಮಧ್ಯೆ ಭೀಕರ ಅಪಘಾತ : ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಹಾಗೂ ಮಗು ಸ್ಥಳದಲ್ಲೇ ಸಜೀವ ದಹನಗೊಂಡಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಕ್ಲೋವರ್ ಲೀಪ್ ಬಳಿ ಮಂಗಳವಾರ ನಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.
ಗಂಡ - ಹೆಂಡತಿ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಕಾರಿನಲ್ಲಿದ್ದ ಎರಡು ವರ್ಷದ ಮಗು ಕುಷಾವಿ ಹಾಗೂ ತಾಯಿ ಸಿಂಧು (31) ಸಜೀವ ದಹನಗೊಂಡಿದ್ದರು. ಇನ್ನೊಂದು ಮಗು ಪ್ರಣವಿ ಹಾಗೂ ತಂದೆ ಮಹೇಂದ್ರನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ : ಚಾಮರಾಜನಗರ: ಮರಕ್ಕೆ ಬೈಕ್ ಡಿಕ್ಕಿಯಾಗಿ ರೀಲ್ಸ್ ಸ್ಟಾರ್ ಸ್ಥಳದಲ್ಲೇ ಸಾವು