ಸುಳ್ಯ: ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಹೃದಯಾಘಾತದಿಂದ ಮೃತಪಟ್ಟಿದ್ದ ಸುಳ್ಯದ ಕೆರೆಮೂಲೆ ನಿವಾಸಿಯೋರ್ವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ.
ವಾರದ ಹಿಂದೆ ಅನಾರೋಗ್ಯದ ಕಾರಣದಿಂದಾಗಿ ಮಹಿಳೆಯೋರ್ವರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಆದೇ ವಾರ್ಡ್‌ನ ವೃದ್ಧರೊಬ್ಬರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರಿನಲ್ಲಿ ಕೊರೊನಾ ಪರೀಕ್ಷೆಗೆ ಮಹಿಳೆಯ ಗಂಟಲು ದ್ರವದ ಮಾದರಿಯನ್ನು ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮೊದಲೇ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದರು.
ನಿನ್ನೆ ರಾತ್ರಿ ಕೊರೊನಾ ಪರೀಕ್ಷೆಯ ವರದಿ ಬಂದಿದ್ದು, ಸೋಂಕು ತಗುಲಿತ್ತೆಂದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯ ಅಂತ್ಯಕ್ರಿಯೆ ಮಂಗಳೂರಿನಲ್ಲಿಯೇ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.