ಮಂಗಳೂರು: ಸರ್ಕಾರಿ ವೈದ್ಯೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ವೈದ್ಯೆ ದೂರು ದಾಖಲಿಸಿದ್ದಾರೆ.
ಪುತ್ತೂರು ಕಸಬಾ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯೆ ಆಸ್ಪತ್ರೆಯಲ್ಲಿ ರೋಗಿಗಳ ತಪಾಸಣೆಯಲ್ಲಿದ್ದಾಗ ಆಗ ಅಲ್ಲಿಗೆ ಬಂದ ದಕ್ಷಿಣ ಕನ್ನಡ ಜಿಪಂ ಅಧ್ಯಕ್ಷೆ ಮೀನಾಕ್ಷಿ, ಇತ್ತೀಚೆಗೆ ಪೊಲೀಸ್ ದೌರ್ಜನ್ಯಕ್ಕೊಳಗಾದ ಬಾಲಕಿ ಬಗ್ಗೆ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ರೋಗಿಗಳ ತಪಾಸಣೆಯಲ್ಲಿದ್ದ ವೈದ್ಯೆ ಬರುವುದು ಸ್ವಲ್ಪ ವಿಳಂಬವಾಗಿದೆ. ಇದರಿಂದ ಸಿಟ್ಟಿಗೆದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ, ಸಾರ್ವಜನಿಕರೆದುರೆ ವೈದ್ಯರಿಗೆ ನಿಂದಿಸಿದ್ದಾರೆ.
ಅಷ್ಟೇ ಅಲ್ಲ, ತಮ್ಮ ಬೆಂಬಲಿಗರಿಂದ ವಿಡಿಯೋ ಚಿತ್ರೀಕರಣ ಮಾಡಿಸಿ, ಅದನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ರಿಂದ ತನ್ನ ಮಾನಹಾನಿಯಾಗಿದೆ ಎಂದು ವೈದ್ಯೆ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಜಿಪಂ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.