ಮಂಗಳೂರು: ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರು ಮಾರಿದ್ದಾರೆನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ಈ ಆರೋಪದ ಕುರಿತು ಆಂತರಿಕ ತನಿಖೆ ನಡೆಸಬೇಕೆಂದು ಮಂಗಳೂರು ನಗರ ಪೊಲೀಸ್ ಆಯುಕ್ತರು, ಡಿಸಿಪಿ ವಿನಯ್ ಗಾಂವ್ಕರ್ ಅವರಿಗೆ ಜವಾಬ್ದಾರಿ ವಹಿಸಿದ್ದಾರೆಂದು ತಿಳಿದು ಬಂದಿದೆ.
ಐಷಾರಾಮಿ ಕಾರುಗಳ ಮಾರಾಟದ ಹಿಂದೆ ಸಿಸಿಬಿ ಪೊಲೀಸ್ ಅಧಿಕಾರಿಗಳಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದಂತೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಪ್ರಕರಣದ ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ವಿನಯ್ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ವರದಿಯನ್ನು ಮೂರು ದಿನಗಳೊಳಗೆ ನೀಡಿ, ಬಳಿಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಹೆಚ್ಚುವರಿ ವರದಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.