ಬಂಟ್ವಾಳ: ತಾಲೂಕಿನ ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 70 ಲಕ್ಷ ರೂ. ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಸುಮಾರು 30 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಇಂದು ನೆರವೇರಿಸಲಾಯಿತು.
ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ನೆರವೇರಿಸಿದರು. ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ರುದ್ರಭೂಮಿ (ಮೋಕ್ಷಧಾಮವನ್ನು) ಯನ್ನು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ.ಎಸ್. ಕೃಷ್ಣ ಭಟ್ ಅವರು ಲೋಕಾರ್ಪಣೆಗೊಳಿಸಿದರು. ರುದ್ರಭೂಮಿ ಕಚೇರಿ ಕಟ್ಟಡ, ತಂಗುದಾಣ, ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಿಲಾನ್ಯಾಸವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ನಡೆಸಿದರು. ಕುದ್ದುಪದವು ಕುಡಿಯುವ ನೀರಿನ ಯೋಜನೆಗೆ ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೋಡಂದೂರು ಶಿಲಾನ್ಯಾಸ ನಡೆಸಿದರು.
ಈ ವೇಳೆ ಅಳಿಕೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಕಾನ ಈಶ್ವರ ಭಟ್, ಎಪಿಎಂಸಿ ಸದಸ್ಯರಾದ ಗೀತಲತಾ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮೊದಲಾದವರು ಉಪಸ್ಥಿತರಿದ್ದರು.