ನೆಟ್ಟಣ (ದ.ಕ.) : ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಹೋಟೆಲ್ ಒಂದರ ಮೇಲೆ ಅಬಕಾರಿ ಇಲಾಖಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಬಯಲಾಗಿದೆ. ಆರೋಪಿ ಪರಾರಿಯಾಗಿದ್ದು, ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇಲ್ಲಿನ ನೆಟ್ಟಣ (ಸುಬ್ರಹ್ಮಣ್ಯ ರೋಡ್) ಪೇಟೆಯಲ್ಲಿರುವ ಹೋಟೆಲ್ ಅಂಬಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ನಿರೀಕ್ಷಕಿ ಸುಜಾತ ಮತ್ತು ಸಿಬ್ಬಂದಿ ದಾಳಿ ನಡೆಸಿ, ಸುಮಾರು 2.52 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ದೂರು ದಾಖಲಿಸಿಕೊಂಡಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ವಿಬಿನ್ ಎಂಬಾತ ತಪ್ಪಿಸಿಕೊಂಡಿದ್ದಾನೆ. ಮದ್ಯ ಮಾತ್ರವಲ್ಲದೇ ಈ ಹೋಟೆಲ್ ನಲ್ಲಿ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬುದಾಗಿ ಅಬಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.