ಬಂಟ್ವಾಳ: ಬಂಟ್ವಾಳ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ಕೋಡಿಜಾಲ್ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೂಲತಃ ಪುತ್ತೂರಿನ ಕಸ್ಬಾ ಕೋಡಜಾಲು ನಿವಾಸಿಯಾಗಿದ್ದ ಶ್ರೀಧರ್ (46), ಪ್ರಸ್ತುತ ಪುತ್ತೂರಿನ ಜಿಡೆಕಲ್ಲುನಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಿವಾಸ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಕೋವಿಡ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಸುಮಾರು 20 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ ಪಾಲಿತ್ತಡಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ ಇವರು, ಬಳಿಕ ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿ ಆರ್ ಐ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಅವರು ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು.