ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಸ್ಕೂಟರ್ ಸವಾರರೋರ್ವರು ಡಿವೈಡರ್ ಬಳಿ ಬಲಕ್ಕೆ ತಿರುಗಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಮೃತರನ್ನು ಕುಲ್ಕುಂದ ನಿವಾಸಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಎ. ಪೆರ್ಗಡೆ ಗೌಡ (67) ಎಂದು ಗುರುತಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಎದುರು ಈ ಘಟನೆ ನಡೆದಿದೆ. ಅಪಘಾತದಲ್ಲಿ ಪೆರ್ಗಡೆ ಗೌಡ ಅವರ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಇವರನ್ನು ಕಡಬದ ಆಸ್ಪತ್ರೆಗೆ ದಾಖಲಿಸಲಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢೀಕರಿಸಿದರು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಯಾತ್ರಿಕರ ಕಾರು ಇವರು ಸಂಚರಿಸುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ದೂರಿನಂತೆ ಕುಕ್ಕೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನಾನಕ್ಕೆ ತೆರಳಿ ನೀರುಪಾಲಾದ ವಿದ್ಯಾರ್ಥಿ: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಬಾಲಕನನ್ನು ಪುತ್ತೂರು ಸಮೀಪದ ನರಿಮೊಗರು ಎಂಬಲ್ಲಿನ ಐಟಿಐ ವಿದ್ಯಾರ್ಥಿ ಹಾಗೂ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬುವರ ಪುತ್ರ ನಿತೇಶ್ ಎಂದು ಗುರುತಿಸಲಾಗಿದೆ.
ಈತ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆ ಬಂದು ನದಿ ನೀರಿಗಿಳಿದಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ, ಸ್ಥಳೀಯರ ನೆರವಿನೊಂದಿಗೆ ಮೃತದೇಹ ಪತ್ತೆ ಮಾಡಿದ್ದಾರೆ. ಘಟನೆ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.