ಸುರತ್ಕಲ್: ಹಲ್ಲೆಕೋರರ ಪರವಾಗಿ ಮಾತನಾಡಿರುವ ಶಾಸಕ ಜಮೀರ್ ಅಹ್ಮದ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ದೂರು ನೀಡಿದ್ದಾರೆ.
ಬೆಂಗಳೂರಿನ ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು, ಪೊಲೀಸರು ಹಾಗೂ ಆರೋಗ್ಯ ತಪಾಸಣಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಶಾಸಕ ಜಮೀರ್ ಅಹ್ಮದ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ವಿರುದ್ಧ ರಾಷ್ಟ್ರದ್ರೋಹದ ಕೇಸು ದಾಖಲಿಸಬೇಕೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸುರತ್ಕಲ್ ಪೊಲೀಸ್ ಠಾಣಾಧಿಕಾರಿಗೆ ಒತ್ತಾಯಿಸಿದರು.
ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದೆ. ಶಾಸಕರನ್ನು ಶೀಘ್ರವೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯುವಮೋರ್ಚಾ ಆಗ್ರಹಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ಸಂಜಿತ್ ಶೆಟ್ಟಿ ಉಪಸ್ಥಿತರಿದ್ದರು.