ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ಸಂಶೋಧನಾ ಸಂಘ (ನಿ) ಮಂಗಳೂರು, ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಇಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿತ್ತು.
ಕೊರೊನಾ ವೈರಸ್ನಿಂದಾಗಿ ಜಿಲ್ಲೆಯ ಬ್ಲಡ್ ಬ್ಯಾಂಕುಗಳಲ್ಲಿ ರಕ್ತದ ಕೊರತೆ ಉಂಟಾಗಿರುವುದನ್ನು ಮನಗಂಡು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಎಸ್.ಎಂ. ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ರಕ್ತದಾನಕ್ಕಿಂತ ಮಿಗಿಲಾದ ದಾನ ಇನ್ನೊಂದಿಲ್ಲ. ಒಂದು ಜೀವವನ್ನು ಉಳಿಸುವ ಮಹಾನ್ ಕಾರ್ಯ ರಕ್ತದಾನದ ಮೂಲಕ ಆಗುತ್ತದೆ. ಯುವಜನರು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡಲು ಮುಂದಾಗಬೇಕಾಗಿದೆ ಎಂದರು. ಕಾಯಿಲೆಗೆ ಒಳಗಾದ ಸಂದರ್ಭದಲ್ಲಿ ರಕ್ತಕ್ಕಾಗಿ ಪರದಾಡುವ ಪರಿಸ್ಥಿತಿ ಜಿಲ್ಲೆಯಲ್ಲಿ ಉದ್ಭವಿಸಬಾರದು ಎಂಬ ಉದ್ದೇಶದಿಂದ ವರ್ಷಕ್ಕೆ ಮೂರು ಬಾರಿ ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಸಂಘದ ಉಪಾಧ್ಯಕ್ಷ ವೆಂಕಟೇಶ್ ಮಯ್ಯ, ನಿರ್ದೇಶಕರುಗಳಾದ ಶಿವಕುಮಾರ್ ಎಸ್.ಎಂ, ಸುಕನ್ಯಾ ಎಚ್, ಶೇಖರ್ ಎಲ್, ರೆಡ್‌ಕ್ರಾಸ್ ಸಂಸ್ಥೆಯ ಸಂಯೋಜಕ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಶಿಬಿರದಲ್ಲಿ 60ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.