ಮಂಗಳೂರು: ನ್ಯಾಯಾಲಯದ ಆವರಣದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ರಕ್ತದ ಕಲೆ ಕಂಡು ಬಂದಿದ್ದು, ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.
ನಿನ್ನೆ ಮಧ್ಯಾಹ್ನ 2:30 ರ ಸುಮಾರಿಗೆ ಕಸ ಗುಡಿಸುವ ಕಾರ್ಮಿಕರು ರಕ್ತದ ಕಲೆಯನ್ನು ಗಮನಿಸಿದ್ದಾರೆ. ಬಳಿಕ ಅಲ್ಲಿ ಸೇರಿದ ವಕೀಲರು ಮಂಗಳೂರು ಉತ್ತರ (ಬಂದರ್) ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಅಲ್ಲದೆ ಇಲ್ಲಿ ಪಾರ್ಕ್ ಮಾಡಲಾಗಿದ್ದ ವಕೀಲರೊಬ್ಬರ ಸ್ಕಾರ್ಪಿಯೋ ವಾಹನದ ಮೇಲೂ ರಕ್ತದ ಕಲೆ ಕಂಡುಬಂದಿದೆ. ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಸಿಬ್ಬಂದಿ ಆಗಮಿಸಿ ರಕ್ತದ ಮಾದರಿ ಸಂಗ್ರಹಿಸಿದ್ದಾರೆ.
ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಆದರೆ ಘಟನೆ ನಡೆದ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಇರಲಿಲ್ಲವಾದ್ದರಿಂದ ಮಾಹಿತಿ ಲಭ್ಯವಾಗಿಲ್ಲ. ಇನ್ನು ತಲವಾರಿನಿಂದ ಯಾರಿಗೋ ಹಲ್ಲೆ ಮಾಡಿ ಗಾಯಗೊಳಿಸಿದಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಅಲ್ಲಿಂದ ಕಾರಲ್ಲಿ ಹೋಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಈ ಬಗ್ಗೆ ಬಂದರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.