ಮಂಗಳೂರು: ಸ್ಮಾರ್ಟ್ ಸಿಟಿ ಲಿಮಿಟೆಡ್ ಯೋಜನೆಯಡಿ ಮಂಗಳೂರು ನಗರದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದ್ದು, ಮುಂಬರುವ ವರ್ಷದಲ್ಲಿ ಪಂಪ್‍ವೆಲ್‍ನಲ್ಲಿ ಬಹುದೊಡ್ಡ ಬಸ್ ನಿಲ್ದಾಣದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಮಂಗಳೂರು ನಗರದ ಉರ್ವ ಮಾರುಕಟ್ಟೆ ಬಳಿ 20.54 ಕೋ. ರೂ.ಗಳಡಿ ಉದ್ದೇಶಿತ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಕೋರ್ಟನ್ನು ಒಳಗೊಂಡ ಒಳಾಂಗಣ ಕ್ರೀಡಾಂಗಣ ಹಾಗೂ 70 ಕೋಟಿ ರೂ.ಗಳ ವೆಚ್ಚದಲ್ಲಿ ಹಂಪನಕಟ್ಟೆ ಹಳೆ ಬಸ್ ನಿಲ್ದಾಣದ ಬಳಿ ಪಿಪಿಪಿ ಮಾದರಿಯಡಿ ಉದ್ದೇಶಿತ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ನಿರ್ಮಾಣ ಕಾಮಗಾರಿಗಳಿಗೆ ಪುರಭವನದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
![bustand to build in pumpwell says Nalin kumar katil](https://etvbharatimages.akamaized.net/etvbharat/prod-images/kn-mng-03-pumpwell-bus-stand-script-ka10015_03112021194057_0311f_1635948657_947.jpg)
ಮುಂದಿನ ವರ್ಷ ಮಂಗಳೂರಿನ ಪಂಪ್‍ವೆಲ್‍ನಲ್ಲಿ ಅತಿ ದೊಡ್ಡ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಕೈಗೊಳ್ಳಲಾಗುವುದು, ಆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದ್ದು, ಅಂಕಿತವಾಗಿದೆ. ಸೆಂಟ್ರಲ್ ಮಾರುಕಟ್ಟೆ ಸ್ಥಳಾಂತರ ಕುರಿತಂತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸಮಸ್ಯೆ ಇರ್ತಥ್ಯವಾದ ಬಳಿಕ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಯನ್ನು 2ನೇ ಹಂತದಲ್ಲಿ ಕೈಗೊಳ್ಳಲಾಯಿತು. ಆದರೂ ಕಾಮಗಾರಿಗಳಲ್ಲಿ ಮಂಗಳೂರು ನಂಬರ್ ಒನ್ ಆಗಿ ಹೊರಹೊಮ್ಮಿದೆ. ಅದಕ್ಕೆ ಪ್ರಮುಖ ಕಾರಣ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಶಾಸಕರ ಉತ್ಸಾಹ ಹಾಗೂ ಪ್ರೋತ್ಸಾಹ. ಮಂಗಳೂರು ಮೇಯರ್ ಕೂಡ ಸ್ಮಾರ್ಟ್ ಸಿಟಿಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಕೇಂದ್ರದಿಂದ 500 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.
ಸ್ಮಾರ್ಟ್ ಸಿಟಿಯ ಕಾಮಗಾರಿಗಳನ್ನು ಕೈಗೊಳ್ಳಲು ಯಡಿಯೂರಪ್ಪ ನೇತೃತ್ವದ ಸರ್ಕಾರವು ಮೊದಲ ಹಂತದಲ್ಲಿ 300 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿತ್ತು. ಅದರಲ್ಲಿ ಗುಣಮಟ್ಟದ ಕಾಂಕ್ರಿಟ್ ರಸ್ತೆಗಳು ಸೇರಿದಂತೆ, ಇತರೆ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಹಿಂದಿಗಿಂತಲೂ ಇದೀಗ ಮಂಗಳೂರಿನಲ್ಲಿ ಸುಂದರ ರಸ್ತೆಗಳು ನಿರ್ಮಾಣವಾಗಿವೆ. ಸ್ಮಾರ್ಟ್ ಸಿಟಿಯೊಂದಿಗೆ ಅಮೃತ್ ಯೋಜನೆಯಡಿ 180 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಆ ಯೋಜನೆಯಡಿ ಮೂಲಭೂತ ಸೌಕರ್ಯ ಹಾಗೂ ಯುಜಿಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.