ಉಳ್ಳಾಲ (ದಕ್ಷಿಣಕನ್ನಡ): ಬಾಳೆಪುಣಿಯ ಒಂಟಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಣಾಜೆ ಠಾಣೆ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಅನುಮಾನಾಸ್ಪದ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಈ ಪ್ರಕರಣದಿಂದ ಮಹಿಳೆಯರಲ್ಲಿ ಸುರಕ್ಷತೆಯ ಭಾವನೆ ಕಾಡುವಂತಾಗಿದೆ. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಸ್ಥಳೀಯರಲ್ಲಿರುವ ಆತಂಕ ದೂರ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರಗಳು ಹೆಚ್ಚುತ್ತಿವೆ. ಬಾಳೆಪುಣಿಯ ಒಂಟಿ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸದಿದ್ದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.