ಮಂಗಳೂರು: ದ.ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಇಂದು ಎಸಿಪಿ ಗ್ರೇಡ್ ಅಧಿಕಾರಿ ಹಾಗೂ ಬಜ್ಪೆ ಠಾಣೆಯಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದ.ಕ ಜಿಲ್ಲೆಯಲ್ಲಿ ಈವರೆಗೆ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಇಂದು ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೋರ್ವರಿಗೆ ಸೋಂಕು ತಗುಲಿದೆ. ಭಾನುವಾರ ಈ ಅಧಿಕಾರಿ ನಗರದ ಬೋಳಾರದಲ್ಲಿ ನಡೆದಿರುವ ಮೃತ ಸೋಂಕಿತನೋರ್ವನ ಅಂತ್ಯ ಸಂಸ್ಕಾರದಲ್ಲಿ ಬಂದೋಬಸ್ತ್ ಕಾರ್ಯದಲ್ಲಿ ಭಾಗವಹಿಸಿದ್ದರು. ಈ ಮೂಲದಿಂದ ಸೋಂಕು ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ದನ ಕಳವಿಗೆ ಸ್ಕೆಚ್ ಹಾಕುತ್ತಿದ್ದ ಇಬ್ಬರು ಆರೋಪಿಗಳು ನಿನ್ನೆ ಬಂಧನಕ್ಕೊಳಗಾಗಿದ್ದರು. 26 ಹಾಗೂ 34 ವರ್ಷದ ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು, ಇಬ್ಬರಲ್ಲೂ ಸೋಂಕು ದೃಢಪಟ್ಟಿದೆ.
ಇದೀಗ ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದ 8 ಮಂದಿ ಪೊಲೀಸರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಇವರ ಗಂಟಲು ದ್ರವದ ಮಾದರಿಯನ್ನು ತಪಾಸಣೆಗಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಜ್ಪೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.