ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಉಳ್ಳಾಲದ 60 ವರ್ಷದ ಈ ಮಹಿಳೆ ಕೊರೊನಾ ಸೋಂಕಿತರಾಗಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪಿತ್ತಕೋಶದ ಸಮಸ್ಯೆ ಕೂಡ ಇತ್ತು. ಇದರ ನಡುವೆ ಚಿಕಿತ್ಸೆ ನೀಡಲಾಗುತ್ತಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದರು. ಸುರತ್ಕಲ್, ಜೋಕಟ್ಟೆ, ಬಂಟ್ವಾಳದ ಕೊರೊನಾ ರೋಗಿಗಳು ನಿನ್ನೆ ಸಾವನ್ನಪ್ಪಿದ್ದರೆ ಇಂದು ಉಳ್ಳಾಲದ ಮಹಿಳೆ ಕೊನೆಯುಸಿರೆಳೆದಿದ್ದಾರೆ.
ಸೋಂಕಿನ ಭಯದಿಂದ ಒಂದು ಆತ್ಮಹತ್ಯೆ ಪ್ರಕರಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.