ಮಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿಯಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೊರವಲಯದಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ.
ದೇಶ-ವಿದೇಶಗಳಿಂದ ದಿನ ನಿತ್ಯವೂ ಇಲ್ಲಿಗೆ ಪ್ರಾಣಿಗಳ ವೀಕ್ಷಣೆಗೆ ಪ್ರೇಕ್ಷಕರು ಆಗಮಿಸುತ್ತಿದ್ದು, ದೇಶಾದ್ಯಂತ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಏಳು ದಿನಗಳ ಕಾಲ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ನಿನ್ನೆಯಿಂದಲೇ ಪಿಲಿಕುಳ ನಿಸರ್ಗಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ತಡೆಹಿಡಿಯಲಾಗಿದೆ.
ಅಲ್ಲದೆ ಹಕ್ಕಿ ಜ್ವರವೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪಕ್ಷಿಧಾಮಕ್ಕೆ ಸೋಂಕು ನಿರೋಧಕ ಔಷಧಿ ಸಿಂಪಡಿಸಲಾಗುತ್ತಿದೆ. ಜೊತೆಗೆ ಯಾವುದೇ ಗಾಯಾಳು ಪ್ರಾಣಿ-ಪಕ್ಷಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.