ಮಂಗಳೂರು: ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಮನೆಗೆ ತೆರಳಿ ಸೊಳ್ಳೆ ಉತ್ಪತ್ತಿ ತಾಣವನ್ನು ಗುರುತಿಸಿ ಸಮೀಕ್ಷೆ ನಡೆಸಬೇಕು. ಅಲ್ಲದೆ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಸೊಳ್ಳೆ ದಿನ ಕಾರ್ಯಕ್ರಮ ಹಾಗೂ ಮಲೇರಿಯಾ, ಡೆಂಗ್ಯೂ ನಿಯಂತ್ರಣದಲ್ಲಿ ವಿವಿಧ ಇಲಾಖೆಯ ಪಾತ್ರದ ಕುರಿತು ಅಂತರ್ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿದರು.
ಕಳೆದ ಹಲವು ತಿಂಗಳುಗಳಿಂದ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು ಸೇರಿದಂತೆ ಇನ್ನಿತರ ಕಟ್ಟಡಗಳು ಮುಚ್ಚಿದ್ದು, ಆ ಕಟ್ಟಡಗಳ ಮೇಲ್ಭಾಗದಲ್ಲಿ ನೀರು ಶೇಖರಣೆಗೊಂಡು ಸೊಳ್ಳೆ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಆದುದರಿಂದ ಅಂತಹ ಎಲ್ಲಾ ಪ್ರದೇಶಗಳನ್ನು ಗುರುತಿಸಿ ಜಿಲ್ಲಾ ಆರೋಗ್ಯ ಇಲಾಖೆ, ಆರೋಗ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರ ನೆರವು ಪಡೆದುಕೊಂಡು ಲಾರ್ವಾ ಸಮೀಕ್ಷೆ ನಡೆಸಬೇಕು ಎಂದು ಹೇಳಿದರು.
ಗುಜರಿ ಅಂಗಡಿಗಳ ಸುತ್ತಮುತ್ತ ನಿರುಪಯುಕ್ತ ಸಾಮಾಗ್ರಿಗಳಿಂದ ಸೊಳ್ಳೆ ಉತ್ಪತ್ತಿಯಾಗುತ್ತಿದೆ. ಮಂಗಳೂರು ಮನಪಾ ಸಂಬಂಧಪಟ್ಟ ಅಧಿಕಾರಿಗಳು ಅತಂಹ ಅಂಗಡಿಗಳನ್ನು ಪತ್ತೆ ಮಾಡಿ ಟ್ರೇಡ್ ಲೈಸನ್ಸ್ ರದ್ದುಗೊಳಿಸುವಂತೆ ಸೂಚಿಸಿದರು.
ನಗರದಲ್ಲಿ ನಿರಾಶ್ರಿತರಿಗೆ ಡೆಂಗ್ಯೂ ಅಥವಾ ಮಲೇರಿಯಾ ಜ್ವರ ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ ರಚನೆ ಮಾಡಿ ನಗರದಲ್ಲಿರುವ ನಿರಾಶ್ರಿತರ ಸಂಖ್ಯೆಯನ್ನು ಪಟ್ಟಿ ಮಾಡಬೇಕು. ನಗರದಲ್ಲಿರುವ ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ಒಂದು ವಾರದೊಳಗಡೆ ವರದಿ ಸಿದ್ಧಪಡಿಸಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಮಲೇರಿಯಾ ನಿಯಂತ್ರಣಾಧಿಕಾರಿ ನವೀನ್ ಚಂದ್ರ ಕುಲಾಲ್, ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.