ಮಂಗಳೂರು: ಕೇಂದ್ರ ಸರ್ಕಾರದ ಸಿಎಎ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ಸಮಾವೇಶವು ನಗರದ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನ ಭಾಷಣ ಮಾಡಲಿರುವ ಹಿನ್ನೆಲೆ ಸಕಲ ಸಿದ್ಧತೆ ನಡೆಸಲಾಗಿದೆ.
ಈ ಸಮಾವೇಶದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕೆಎಸ್ಆರ್ಪಿ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕಾ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ದಳ ಕೂಡಾ ಸ್ಥಳದಲ್ಲಿ ತಪಾಸಣೆ ನಡೆಸಿದೆ. ಹೆದ್ದಾರಿ ಸಂಚಾರದಲ್ಲಿಯೂ ಸಾಕಷ್ಟು ಮಾರ್ಪಾಡು ಮಾಡಲಾಗಿದೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಮಾವೇಶ ಆರಂಭವಾಗಲಿದ್ದು, ಕೇಂದ್ರ ರಕ್ಷಣಾ ಸಚಿವರು ಪ್ರಧಾನ ಭಾಷಣ ಮಾಡಲಿದ್ದಾರೆ. ಅಲ್ಲದೆ ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಬಿಜೆಪಿ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ.