ಮಂಗಳೂರು: ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ದುರಂತ ಸಂಭವಿಸಿ ವರ್ಷ ಕಳೆದಿದೆ. ಇಲ್ಲಿನ ಸ್ಥಳೀಯರಿಗೆ ಕುಡಿಯುವ ನೀರು ಹಾಗೂ ಕೃಷಿ ಸಂಬಂಧಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವಾಗಿ ಸಮಗ್ರ ವರದಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಸುವುದಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಎ.ಜಿ. ಶಿಲ್ಪಾ ಹೇಳಿದರು.
ಹೈಕೋರ್ಟ್ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ನ್ಯಾಯಾಧೀಶರು ಮತ್ತು ಪ್ಯಾನೆಲ್ ವಕೀಲರ ನಿಯೋಗ ಪಚ್ಚನಾಡಿ ತ್ಯಾಜ್ಯ ದುರಂತ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ಪಚ್ಚನಾಡಿ ತ್ಯಾಜ್ಯ ದುರಂತ ಪ್ರದೇಶದಲ್ಲಿರುವ ಮನೆಗಳಿಗೆ ಮಂಗಳೂರು ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿದೆಯೇ ಎಂಬುದನ್ನು ನಿಯೋಗ ಪರಿಶೀಲಿಸಿತು. ಈ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆಯಲಾಯಿತು.