ಮಂಗಳೂರು; ಕೇರಳದಲ್ಲಿ ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಕಟೀಲು ದೇವಸ್ಥಾನಗಳಲ್ಲಿ ಸೇವೆಗಳಿಗೆ ನಿರ್ಬಂಧ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.
ನಾಳೆಯಿಂದ (ಆಗಸ್ಟ್ 5) ಆಗಸ್ಟ್ 15 ವರೆಗೆ ಈ ಮೂರು ದೇವಸ್ಥಾನಗಳು ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮಾತ್ರ ತೆರೆದಿರಲಿದ್ದು, ಈ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶ ವಿರುವುದಿಲ್ಲ.
ಶನಿವಾರ ಮತ್ತು ಭಾನುವಾರ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ವಸತಿ ಗೃಹದಲ್ಲಿ ತಂಗಲು ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಈ ಸಂದರ್ಭದಲ್ಲಿ ಅರ್ಚಕರುಗಳಿಂದ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಸೋಮವಾರದಿಂದ ಶುಕ್ರವಾರದವರೆಗಿನ ಅವಧಿಯಲ್ಲಿ ವಸತಿಗೃಹದಲ್ಲಿ ತಂಗಲು ಬಯಸುವವರು 72 ಗಂಟೆಯೊಳಗಿನ RT-PCR ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಮತ್ತು ಕೊಠಡಿಗಳಲ್ಲಿ ಹೆಚ್ಚುವರಿ ವ್ಯಕ್ತಿಗಳು ತಂಗಲು ಅವಕಾಶವಿರುವುದಿಲ್ಲ. ಎಲ್ಲಾ ಕೊಠಡಿಗಳನ್ನು ವಾಸ್ತವ್ಯಕ್ಕೆ ಮುಂಚೆ ಸ್ಯಾನಿಟೈಸ್ ಮಾಡುವುದು ಮತ್ತು ಭಕ್ತಾದಿಗಳು ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಈ ಮೂರು ಪ್ರಮುಖ ದೇವಸ್ಥಾನಗಳಿಗೆ ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರುಗಳು ಆಗಮಿಸುವುದರಿಂದ ಈ ನಿರ್ಬಂಧ ವಿಧಿಸಲಾಗಿದೆ.