ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕಳೆದ ಜುಲೈ ತಿಂಗಳಲ್ಲಿ ಒಂದೇ ದಿನ ಸುಮಾರು 50 ಕೋಟಿಯಷ್ಟು ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಡೆಸಿದ್ರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಕೆ ರವಾನಿಸಿದರು.
ಭಾನುವಾರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ನಂತರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಪಶ್ಚಿಮ ವಲಯದ ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೂಡಲೇ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದೇನೆ ಎಂದು ಹೇಳಿದರು.
ಈ ವೇಳೆ ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ, ಕ್ರಿಕೆಟ್ ಆಟಗಾರ ಮಯಾಂಕ್ ಅಗರ್ವಾಲ್, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಕುಕ್ಕೆ ಸುಬ್ರಹ್ಮಣ್ಯ ಎಐ ಜಂಬೂರಾಜ್ ಮಹಾಜನ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.