ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖ ಕಂಡಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿರುವ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಕೆಲವೊಂದು ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಆದರೆ ದೇಗುಲಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ಆಡಳಿತ ಮಂಡಳಿ ಕಟ್ಟುನಿಟ್ಟಾಗಿ ಇದನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ಜೊತೆಗೆ ದೇಗುಲಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ತಪಾಸಣೆ ನಡೆಸಿ ನೆಗೆಟಿವ್ ವರದಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
ಎರಡು ಡೋಸ್ ಲಸಿಕೆ ಪಡೆದ ಭಕ್ತಾದಿಗಳೂ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಲಸಿಕೆ ಪಡೆಯದ ಭಕ್ತಾದಿಗಳಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಬೇಕು. ದೇವಾಲಯಗಳಲ್ಲಿ ನಡೆಯುವ ವಿವಿಧ ಸೇವೆಗಳನ್ನು ಆದಷ್ಟು ಮಿತಿಗೊಳಿಸಿ ಜನಸಂದಣಿಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಗಡಿ ಭಾಗದ ಮದ್ಯದಂಗಡಿಗಳ ಮೇಲಿನ ಕೆಲವು ನಿರ್ಬಂಧಗಳು ತೆರವು
ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ದ.ಕ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿನ 19ಗ್ರಾಮಗಳ ಮದ್ಯದಂಗಡಿಗಳಿಗೆ ಸೆ.21ರಿಂದ ಮುಂದಿನ ಆದೇಶದ ವರೆಗೆ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರಗೆ ಷರತ್ತುಗಳನ್ನು ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮದ್ಯ ಮಾರಾಟ ಮಳಿಗೆಯಲ್ಲಿ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಗ್ರಾಹಕರು ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳುವುದು. ಮಳಿಗೆಯ ಆಸುಪಾಸುಗಳಲ್ಲಿ ಸಾರ್ವಜನಿಕರು ಗುಂಪುಗೂಡದಂತೆ ಕ್ರಮ ವಹಿಸಬೇಕು. ಕೇರಳ ರಾಜ್ಯದ ಗಡಿಭಾಗಗಳಿಂದ ಆರ್ಟಿಪಿಸಿಆರ್ ವರದಿಯಿಲ್ಲದೆ ಅಕ್ರಮವಾಗಿ ಕೇರಳ ರಾಜ್ಯದ ವಾಸಿಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಿ, ಬಾರು/ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಸೇವಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ:ಕೋವಿಡ್ ಪ್ರಕರಣಗಳು ಹೆಚ್ಚಳದ ಭೀತಿಯೇ 1 ರಿಂದ 5ನೇ ತರಗತಿ ಆರಂಭಕ್ಕೆ ತಡೆ!