ಮಂಗಳೂರು (ದ.ಕ): ಕೊರೊನಾ ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಶಾಸಕ ಐವನ್ ಡಿಸೋಜ ಕಿಡಿ ಕಾರಿದ್ದಾರೆ.
ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆಗಾಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬೆಡ್ಗಳನ್ನು ಬಳಸಲು ಸೂಚಿಸಿದ್ದರೂ, ಜಿಲ್ಲಾಡಳಿತ ಇನ್ನೂ ಎಚ್ಚೆತ್ತುಕೊಂಡಿಲ್ಲ. ಇಲ್ಲಿಯವರೆಗೆ ಮಲಗಿದೆಯೇ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಕೊರೊನಾ ಸೋಂಕಿತ ರೋಗಿಗಳು ನಿರ್ಲಕ್ಷ್ಯಕ್ಕೊಳಗಾಗಿದ್ದು, ಜಿಲ್ಲಾಡಳಿತ ಅವರನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಿದೆ. ಖಾಸಗಿ ಆಸ್ಪತ್ರೆಗಳು ಸೋಂಕಿತರನ್ನು ಸುಲಿಗೆ ಮಾಡುತ್ತಿವೆ. ನೀವು ಅವರಿಗೆ ಪ್ರೋತ್ಸಾಹ ಮಾಡುತ್ತಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಗೆ ಖಾಸಗಿ ಆಸ್ಪತ್ರೆಗಳ ಬೆಡ್ಗಳನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೇಳಬೇಕೇ?, ಇದರಿಂದ ಜನಪ್ರತಿನಿಧಿಗಳು ಜನರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಅನ್ನೋದು ಸ್ಪಷ್ಟವಾಗುತ್ತಿದೆ. ಶಾಸಕರಾದ ಯು.ಟಿ.ಖಾದರ್ ತಮ್ಮ ಭಾಗದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಉಳಿದ ಮಂಗಳೂರು ಉತ್ತರ ಹಾಗೂ ಮಂಗಳೂರು ದಕ್ಷಿಣದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.