ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅಕ್ಷರ ದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ನೌಕರರ ಹಿತ ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘವು(ಸಿಐಟಿಯು) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
2001-02ರಲ್ಲಿ ಪ್ರಾರಂಭವಾದ ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ದುಡಿಯುತ್ತಿದ್ದಾರೆ. ಕೊರೊನಾ ಲಾಕ್ಡೌನ್ ಬಳಿಕ ಯಾವುದೇ ಪರಿಹಾರವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಬಿಸಿಯೂಟ ನೌಕರರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಅವರಿಗೆ ಏಪ್ರಿಲ್, ಮೇ ತಿಂಗಳ ವೇತನ ನೀಡಬೇಕು. ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಪಿಂಚಣಿ ಬದಲಾಗಿ ಎಲ್ಐಸಿ ಆಧಾರಿತ ಪಿಂಚಣಿ ನೀಡಬೇಕು. ನೌಕರರಿಗೆ 18,000/- ಮಾಸಿಕ ವೇತನ ನೀಡಬೇಕು. ಅಲ್ಲಿಯವರೆಗೆ 5000 ರೂ. ನೀಡಬೇಕು. ಅಕ್ಷರ ದಾಸೋಹ ಯೋಜನೆಗೆ ಕಡಿತ ಮಾಡಿರುವ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ನೀಡಬೇಕು. ನೌಕರರನ್ನು ಡಿ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಹೀಗೆ 22 ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.