ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾರ್ಜ್ ಶೀಟ್ಅನ್ನು ತನಿಖಾಧಿಕಾರಿ ಕೆ.ಯು. ಬೆಳ್ಳಿಯಪ್ಪ ಅವರು ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಪ್ರಕರಣದ ತನಿಖಾ ಪ್ರಕ್ರಿಯೆಯೂ ಕಳೆದ ಏಪ್ರಿಲ್‌ನಲ್ಲಿ ಪೂರ್ಣಗೊಂಡಿದ್ದು, 700 ಪುಟಗಳ ಚಾರ್ಜ್ ಶೀಟ್ ಸಿದ್ಧವಾಗಿದೆ. ಅದನ್ನು ಜಿಲ್ಲಾಧಿಕಾರಿ ಅನುಮತಿ ಪಡೆದು ರಾಜ್ಯ ಸರ್ಕಾರದ ಅನುಮತಿಗಾಗಿ ಕಳುಹಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಗೃಹ ಇಲಾಖೆಯ ಕಾರ್ಯದರ್ಶಿಯಿಂದ ಪೂರ್ವಾನುಮತಿ ಪತ್ರ ಬಂದಿದ್ದು, ಈ ಹಿನ್ನೆಲೆ ಚಾರ್ಜ್ ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತನಿಖಾಧಿಕಾರಿ ಹಾಗೂ ಮಂಗಳೂರು ಉತ್ತರ ಉಪವಿಭಾಗದ ಎಸಿಪಿಯೂ ಆಗಿರುವ ಕೆ.ಯು.ಬೆಳ್ಳಿಯಪ್ಪ ತಿಳಿಸಿದ್ದಾರೆ.
ಆರೋಪಿ ಆದಿತ್ಯ ರಾವ್ ದುಷ್ಕೃತ್ಯ ಎಸಗಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದನು ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಅಲ್ಲದೇ ವಿಮಾನ ನಿಲ್ದಾಣದಲ್ಲಿ ಆತ ಇರಿಸಿ ಹೋಗಿದ್ದ ಬ್ಯಾಗ್ನಲ್ಲಿ ಕಂಡು ಬಂದಿರುವ ಅನುಮಾನಸ್ಪದ ವಸ್ತುಗಳು ಸ್ಫೋಟಕಗಳೇ ಆಗಿವೆ ಎನ್ನುವುದು ಎಫ್ಎಸ್ಎಲ್ ಟೆಸ್ಟ್‌ನಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಚಾರ್ಜ್ ಶೀಟ್ ಸಿದ್ಧಪಡಿಸಲಾಗಿದೆ.