ಮಂಗಳೂರು: ಸೂಕ್ತ ಸಾಕ್ಷ್ಯಾಧಾರ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಪ್ರಕರಣದ ಆರೋಪಿಯನ್ನು ದೋಷಮುಕ್ತಗೊಳಿಸಿ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆದೇಶ ನೀಡಿದೆ.
ಕಾರ್ನಾಡ್ ನಿವಾಸಿ ವಿಠ್ಠಲ ಎಂಬಾತ ತನ್ನ ಮಗಳ ಮೇಲೆಯೇ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಮೇಲೆ ಅತ್ಯಾಚಾರ, ಹಲ್ಲೆ, ಜೀವ ಬೆದರಿಕೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಚಾರ್ಜ್ ಶೀಟ್ ಸಲ್ಲಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು 15 ಸಾಕ್ಷಿಗಳನ್ನು ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿತು. ಆದರೆ ಸೂಕ್ತ ಸಾಕ್ಷಿ, ದಾಖಲೆಗಳನ್ನು ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಎಂ.ಆರ್.ಪಲ್ಲವಿ ಆರೋಪಿ ವಿಠ್ಠಲನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿಯ ಪರವಾಗಿ ನ್ಯಾಯವಾದಿಗಳಾದ ರಾಘವೇಂದ್ರ ಹೆಚ್.ಪಿ., ತೇಜಸ್ವಿನಿ, ಶಕೀಲಾ, ತೀರ್ಥ ಅವರು ವಾದ ಮಂಡಿಸಿದ್ದರು.