ಪುತ್ತೂರು(ದಕ್ಷಿಣ ಕನ್ನಡ): ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕೃಷಿ-ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಕಸಬುದಾರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು.
ಕೊರೊನಾ ವೈರಸ್ ಪ್ರೇರಿತ ಲಾಕ್ಡೌನ್ನಿಂದಾಗಿ ಗ್ರಾಮೀಣ ಭಾಗದ ಕಸುಬದಾರರಿಗೆ ಹಾಗೂ ಕೃಷಿಕರಿಗೆ ತೀವ್ರ ತೊಂದರೆಯಾಗಿದ್ದು, ಜೀವನ ನಡೆಸುವುದು ಕಷ್ಟವಾಗಿದೆ. ಈ ಕೂಡಲೇ ಸರ್ಕಾರ ಇತ್ತ ಗಮನ ಹರಿಸಿ ಗ್ರಾಮೀಣ ಕಸಬುದಾರರ ಹಸಿವು, ನಿರುದ್ಯೋಗ, ಆರ್ಥಿಕ ದಿವಾಳಿಯಿಂದ ರಕ್ಷಿಸಬೇಕು ಎಂದು ಕೋರಿ ಪುತ್ತೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಇಂದು ರಾಷ್ಟ್ರಾದ್ಯಂತ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇದರ ಭಾಗವಾಗಿ ಪುತ್ತೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿತು.
ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫರ್ನಾಂಡೀಸ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ, ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.