ಮಂಗಳೂರು: ಸ್ಕೇಟಿಂಗ್ ಚಕ್ರದ ಬೋಲ್ಟ್ನಲ್ಲಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ₹16 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮುಳಿಯಾರುವಿನ ಮೊಹಮ್ಮದ್ ನಿವಾಸ್ ಎಂಬಾತನನ್ನು ಅಕ್ರಮವಾಗಿ ಚಿನ್ನ ಸಾಗಾಟ ಮಾಡಿರುವ ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಇಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು ಈತನನ್ನು ತಪಾಸಣೆ ನಡೆಸಿದ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.
ಈತನನ್ನು ತಪಾಸಣೆ ನಡೆಸುವ ಸಂದರ್ಭದಲ್ಲಿ ಸ್ಕೇಟಿಂಗ್ ಬೋರ್ಡ್ ಸಿಕ್ಕಿದ್ದು, ಇದನ್ನು ಪರಿಶೀಲನೆ ನಡೆಸಿದ ವೇಳೆ ಆತ ಸ್ಕೇಟಿಂಗ್ನ ವ್ಹೀಲ್ ಬೋಲ್ಟ್ ಮತ್ತು ಚಕ್ರಕ್ಕೆ ಸಂಪರ್ಕ ಕಲ್ಪಿಸುವ ರಾಡ್ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಇದರಲ್ಲಿ 335 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ ₹16,21,400 ಎಂದು ಅಂದಾಜಿಸಲಾಗಿದೆ. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.