ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿರಿಸಿ 43,88,400 ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಓರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಸರಗೋಡು ಮೂಲದ ವ್ಯಕ್ತಿ ಬಂಧಿತ ಆರೋಪಿ. ಈತ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ಏರ್ಪೋರ್ಟ್ಗೆ ಬಂದಿಳಿದಿದ್ದ. ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ಚಿನ್ನವನ್ನು ಪುಡಿ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಆರೋಪಿತನಿಂದ 920 ಗ್ರಾಂ ತೂಕದ 43,88,400 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.