ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಇಂದು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೆ ಮತ್ತು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಕಾರಣ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿರಲಿಲ್ಲ.
ಸೋಮವಾರ ಅಧಿಕಾರಿಗಳು ಹರೇಕಳಕ್ಕೆ ಬಂದು ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಮುಂದಾಗಿದ್ದರು. ಆದರೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಹಿಂದೆ ಸರಿದಿದ್ದರು. ಈ ಸಂಬಂಧ ಹರೇಕಳ ಡಿವೈಎಫ್ಐ ಘಟಕ ನಿನ್ನೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಇಂದು ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿದ ಡಿವೈಎಫ್ಐ ಮುಖಂಡರು ಮತ್ತು ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಸೇತುವೆಯ ಎರಡೂ ಕಡೆಗಳಲ್ಲಿ ಅಳವಡಿಸಲಾಗಿದ್ದ ಗೇಟುಗಳನ್ನು ತೆರವುಗೊಳಿಸಿ ಸಾರ್ವಜನಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ಗೇಟ್ ಬಿದ್ದು ಬಾಲಕ ಸಾವು