ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಬಳಿ ಭಾರೀ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ.
ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಗಾಳಿ -ಮಳೆಗೆ ಶಿರಾಡಿ ಘಾಟ್ನಲ್ಲಿ ಬೃಹತ್ ಗಾತ್ರದ ಮರಗಳು ಹೆದ್ದಾರಿ ಮೇಲೆ ಬಿದ್ದಿವೆ. ಮಳೆ ,ಗಾಳಿಯು ಇದೇ ರೀತಿ ಮುಂದುವರಿದಲ್ಲಿ ಮತ್ತಷ್ಟು ಮರಗಳು ನೆಲಕ್ಕುರುಳುವ ಸಾಧ್ಯತೆ ಇದೆ. ಹೀಗಾಗಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಿರಾಡಿ ಘಾಟ್ನಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತ ಗೊಳಿಸಲಾಗಿದೆ.
ಶಿರಾಡಿ ಘಾಟ್ ಬಳಿ ಇನ್ನೂ, ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಮುನ್ಸೂಚನೆಯಿಂದ ಕಾರ್ಯಪಾಲಕ ಇಂಜಿನಿಯರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸಂಚಾರ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ದ.ಕ.ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.