ಮಂಗಳೂರು: ನಗರದಲ್ಲಿ ಕೊಂಚ ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಧಾರಾಕಾರವಾಗಿ ಸುರಿದಿದೆ. ಮುಂದಿನ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆಯಿಂದ ಎರಡು ದಿನಗಳ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಮರ, ಕಟ್ಟಡಗಳ ಅಡಿಯಲ್ಲಿ ನಿಲ್ಲದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ, ತಮ್ಮ ಕೇಂದ್ರ ಸ್ಥಾನದಲ್ಲಿರುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸನ್ನದ್ಧರಿದ್ದು, ಯಾವುದೇ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಸ್ಪಂದಿಸಿ, ಮೇಲಾಧಿಕಾರಿಗಳಿಗೆ ತಿಳಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ ತುರ್ತು ಸೇವೆಗಳಿಗೆ ಟೋಲ್ ಫ್ರೀ ಸಂಖ್ಯೆ-1077 ಹಾಗೂ ವ್ಯಾಟ್ಸ್ಆ್ಯಪ್ ಸಂಖ್ಯೆ - 9483908000 ಕರೆ ಮಾಡಲು ತಿಳಿಸಿದ್ದಾರೆ.