ಬೆಂಗಳೂರು : ನಿಗದಿತ ಅವಧಿಯಲ್ಲಿ ಘನತ್ಯಾಜ್ಯ ವಿಲೇವಾರಿ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ನಗರ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಟ್ಟಡ ನಿರ್ಮಿಸಲು ಲೈಸೆನ್ಸ್ ನೀಡದಂತೆ ತಡೆ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಮಂಗಳೂರು ಮಹಾನಗರ ಪಾಲಿಕೆಗೆ ಕಠಿಣ ಎಚ್ಚರಿಕೆ ನೀಡಿದೆ.
ಮಂಗಳೂರು ಮಹಾನಗರ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾಗಿರುವ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ಪೀಠದ ಈ ಎಚ್ಚರಿಕೆ ನೀಡಿದೆ.
ಸರ್ಕಾರ ಸಲ್ಲಿಸಿರುವ ಮಾಹಿತಿ ಪ್ರಕಾರವೇ ನಗರದಲ್ಲಿ ಪ್ರತಿ ನಿತ್ಯ 200 ಮೆಟ್ರಿಕ್ ಟನ್ ಘನ ತ್ಯಾಜ್ಯ ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಹೀಗಾಗಿ ಪಾಲಿಕೆ 2017ರಿಂದ ಈವರೆಗೆ ಎಷ್ಟು ಹೊಸ ಕಟ್ಟಡಗಳ ನಿರ್ಮಾಣಕ್ಕೆ ಪರವಾನಿಗೆ ನೀಡಿದೆ ಎಂಬುದನ್ನು ತಿಳಿಸಬೇಕು. ಪಾಲಿಕೆ, ಘನತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸಕಾಲದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮಗಳು-2016 ಅನುಷ್ಠಾನಗೊಳಿಸದಿದ್ದರೆ ಮಹಾನಗರ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಹೊಸ ಪರವಾನಿಗೆಗಳನ್ನು ನೀಡದಂತೆ ಪಾಲಿಕೆಗೆ ನಿರ್ಬಂಧ ಹೇರಬೇಕಾಗುತ್ತದೆ ಎಂದು ಹೇಳಿದೆ.
ಇದೇ ವೇಳೆ ಅವೈಜ್ಞಾನಿಕ ಮತ್ತು ಅಕ್ರಮ ತ್ಯಾಜ್ಯ ವಿಲೇವಾರಿಗೆ ಅವಕಾಶ ನೀಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಯಾಕೆ ಜರುಗಿಸಿಲ್ಲ ಎಂದು ವಿವರಣೆ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶಿಸಿದೆ. ಈ ದುರ್ಘಟನೆಯಲ್ಲಿ ಸಂತ್ರಸ್ತರಾದವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ಪಾಲಿಕೆ ಬೇಡಿಕೆ ಇಟ್ಟಿದ್ದ 22 ಕೋಟಿ ರೂ. ಪ್ರಸ್ತಾವನೆ ಬದಲಿಗೆ ಕೇವಲ 8 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದ್ದೇಕೆ? ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಅ.12ಕ್ಕೆ ಮುಂದೂಡಿದೆ.