ಮಂಗಳೂರು (ದಕ್ಷಿಣ ಕನ್ನಡ): ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ದುಬೈನಿಂದ ವಿಮಾನ ಬರಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ದುಬೈನಿಂದ 177 ಭಾರತೀಯರನ್ನು ಹೊತ್ತ ವಿಮಾನ ಬಂದಿಳಿಯಲಿದೆ. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿದ ನಂತರ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರಂಟೈನ್ ಕೇಂದ್ರಗಳಿಗೆ ದ.ಕ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅದೇ ರೀತಿ ಕ್ವಾರಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.