ದಕ್ಷಿಣ ಕನ್ನಡ/ಬೆಳ್ತಂಗಡಿ: ಪತ್ರಕರ್ತರ ಕ್ಷೇಮಾಭಿವೃದ್ದಿಗಾಗಿ ರಾಜ್ಯ ಪತ್ರಕರ್ತರ ಸಂಘವು ಹೆಚ್ಚಿನ ಒತ್ತು ನೀಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಅವರು ಅನಾವರಣಗೊಳಿಸಿ ಮಾತನಾಡಿದ ಅವರು, ಪತ್ರಕರ್ತರು ಸದಾ ಒತ್ತಡದಲ್ಲಿ ಕೆಲಸ ಮಾಡ್ತಾರೆ. ಹಲವಾರು ಸಮಸ್ಯೆಗಳನ್ನು ಪತ್ರಕರ್ತರು ಎದುರಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವು ರಾಜ್ಯ ಸಮ್ಮೇಳನದಲ್ಲಿ ನಡೆಯಲಿದೆ. ಪತ್ರಕರ್ತರ ಕ್ಷೇಮಾಭಿವೃದ್ದಿಗಾಗಿ ಪತ್ರಕರ್ತರ ಸಂಘ ಹೆಚ್ಚಿನ ಒತ್ತು ನೀಡಲಿ ಎಂದರು.
ಅಲ್ಲದೇ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳ ಕ್ಷೇತ್ರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ವಾರ್ತಾಧಿಕಾರಿಗಳಾದ ಖಾದರ್ ಷಾ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.